ಕಾನೂನು ಸುದ್ದಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸಿದ ಚುನಾವಣಾ ಆಯೋಗ

Share It

ಬೆಂಗಳೂರು: ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲು ಅಂತಿಮ ಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿದ್ದು, ಸರ್ಕಾರ ತನ್ನ ವಾದ ಮಂಡಿಸಲು ಕಾಲಾವಕಾಶ ಕೋರಿದೆ. ಅದರಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಈ ವಿಚಾರವಾಗಿ ಅಡ್ವಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಹಾಗಾಗಿ, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಜು.11ಕ್ಕೆ ಮುಂದೂಡಿತು.

ಭರವಸೆ ನೀಡಿದ್ದ ಸರ್ಕಾರ: ಈ ಹಿಂದೆ ಶೀಘ್ರವಾಗಿ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್‌ವಿಂಗಡಣೆ ಅಧಿ ಸೂಚನೆಯನ್ನು ಡಿಸೆಂಬರ್ 19ರಂದು ಪ್ರಕಟಿಸಲಾಗುವುದು. ಮುಂದಿನ ಏಳು ದಿನಗಳಲ್ಲಿ ಕೊಡಗು ಜಿಲ್ಲೆಯ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲಾಗುವುದು. ಅದಾದ ಏಳು ದಿನಗಳಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ಹೈಕೋರ್ಟ್ ಗೆ ಭರವಸೆ ನೀಡಿತ್ತು.

ಅಲ್ಲದೇ, ಮೀಸಲು ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಅದಾದ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ 2023ರ ಡಿಸೆಂಬರ್ 19 ರಂದು ಉಚ್ಚ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಭರವಸೆಯಂತೆ ನಡೆದುಕೊಳ್ಳದಿದ್ದರೆ ಚುನಾವಣಾ ಆಯೋಗ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿತ್ತು.


Share It

You cannot copy content of this page